ಶಿವಮೊಗ್ಗ:- ಕೊರೋನಾ ಸೋಂಕಿತ ಅಪ್ರಾಪ್ತ ಬಾಲಕಿಯ ಸಂಪರ್ಕಕ್ಕೆ ಬಂದಿದ್ದಾರೆ ಎನ್ನುವ ಕಾರಣಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳೇ ಕ್ವಾರಂಟೈನ್ ಗೆ ಒಳಗಾದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಕಳೆದ ಎರಡು ದಿನದ ಹಿಂದೆ 15 ವರ್ಷದ ಬಾಲಕಿಯಲ್ಲಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಸೋಂಕಿತೆ ಪೋಕ್ಸೊ ಕಾಯ್ದೆಯಡಿ ದಾಖಲಾದ ಪ್ರಕರಣವೊಂದರ ಸಂತ್ರಸ್ತೆಯಾಗಿದ್ದು, ಆಕೆಯನ್ನು ಶಿಕಾರಿಪುರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ವಿಚಾರಣೆಗೊಳಪಡಿಸಿದ್ದರು.
ನಾಲ್ಕು ದಿನದ ಹಿಂದೆ ಕೊರೋನಾ ಸಂಬಂಧ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಐದು ಮಂದಿ ಡಿವೈಎಸ್ ಪಿ ಹಾಗೂ ಶಿಕಾರಿಪುರ ಇನ್ಸ್ ಪೆಕ್ಟರ್ ಸೇರಿದಂತೆ ಎಂಟು ಜನ ಇನ್ಸ್ ಪೆಕ್ಟರ್ ಗಳು ಪಾಲ್ಗೊಂಡಿದ್ದರು.
ಈ ನಡುವೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರದಲ್ಲಿದ್ದ ಸಂತ್ರಸ್ತ ಬಾಲಕಿಗೆ ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡ ಹಿನ್ನಲೆಯಲ್ಲಿ ತಪಾಸಣೆಗೊಳಪಡಿಸಲಾಗಿತ್ತು. ತಪಾಸಣೆಯಲ್ಲಿ ಆಕೆಗೆ ಕೊರೋನಾ ದೃಢವಾಗಿದೆ.
ವಿಚಾರಣೆಯ ಹಿನ್ನೆಲೆಯಲ್ಲಿ ಬಾಲಕಿಯ ಪ್ರಾಥಮಿಕ ಸಂಪರ್ಕದಲ್ಲಿ ಶಿಕಾರಿಪುರ ಇನ್ಸ್ ಪೆಕ್ಟರ್ ಬಂದಿದ್ದು, ಆಕೆಗೆ ಕೊರೋನಾ ತಗುಲಿರುವುದು ತಿಳಿಯದೇ ಸಭೆಯಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ಈಗ ಸಭೆಯಲ್ಲಿದ್ದ ಎಸ್.ಪಿ ಹಾಗೂ ಹೆಚ್ಚುವರಿ ಎಸ್.ಪಿ ಸೇರಿದಂತೆ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿದ್ದು ಸರ್ಕಾರಿ ಕಚೇರಿಯನ್ನು ಸೀಲ್ ಡೌನ್ ಮಾಡುವ ಆತಂಕ ಎದುರಾಗಿದೆ.

ಶಿವಮೊಗ್ಗ ಜಿಲ್ಲಾಧಿಕಾರಿ ಹೇಳಿದ್ದು ಹೀಗೆ:-
ಕೋವಿಡ್-19 ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಎಸ್ಪಿ ಕಚೇರಿ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಸೇರಿದಂತೆ ಮೂರು ಮಂದಿ ಪೊಲೀಸ್ ಅಧಿಕಾರಿಗಳು ಕ್ವಾರಂಟೈನ್ನಲ್ಲಿದ್ದಾರೆ. ಇನ್ನುಳಿದಂತೆ ಯಾವುದೇ ಪೊಲೀಸ್ಅಧಿಕಾರಿಗಳುಕ್ವಾರಂಟೈನ್ನಲ್ಲಿರುವುದಿಲ್ಲ.
ಆದರೆ ಮುಂಜಾಗರೂಕತಾ ಕ್ರಮವಾಗಿ ಈಗಾಗಲೇ 11 ಮಂದಿ ಪೊಲೀಸ್ ಅಧಿಕಾರಿಗಳ ಗಂಟಲ ದ್ರವ ಪರೀಕ್ಷೆ ನಡೆಸಲಾಗಿದೆ.
ವಿಶೇಷ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಹೆಚ್ಚುವರಿ ಕರ್ತವ್ಯಕ್ಕಾಗಿ ಬೇರೆ ಜಿಲ್ಲೆಯ ಅಧಿಕಾರಿಗಳನ್ನು ನಿಯೋಜಿಸುವುದು ಸಾಮಾನ್ಯವಾಗಿದ್ದು, ಆದರೂ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಹೊರ ಜಿಲ್ಲೆಯ ಅಧಿಕಾರಿಗಳು ಹೆಚ್ವುವರಿ ಕರ್ತವ್ಯ ವಹಿಸಿಕೊಂಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಎಲ್ಲಾ ಸರ್ಕಾರಿ ಕಚೇರಿಗಳನ್ನು ನಿಗದಿತ ಅವಧಿಯಲ್ಲಿ ಸಂಪೂರ್ಣ ಕ್ರಿಮಿನಾಶಕ ಸಿಂಪಡಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಪರೀಕ್ಷೆಯಲ್ಲಿ ಹೆಚ್ಚಳ:
ಜಿಲ್ಲೆಯಲ್ಲಿ ಇದುವರೆಗೆ 5,172 ಮಂದಿಯ ಗಂಟಲ ದ್ರವ ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದೆ. ಇದರ ಪೈಕಿ 4,828 ಫಲಿತಾಂಶ ಬಂದಿದ್ದು, 320 ಬರಬೇಕಿದೆ. 4,804 ನೆಗೆಟಿವ್ ಬಂದಿದೆ. ಹೊರ ರಾಜ್ಯಗಳಿಂದ ಆಗಮಿಸಿದ್ದ 1,158 ಜನರನ್ನು ಕ್ವಾರೆಂಟೈನ್ ಮಾಡಿ ಪರೀಕ್ಷೆ ನಡೆಸಲಾಗಿದೆ. 943 ಫಲಿತಾಂಶ ಬಂದಿದೆ. ಪ್ರಸ್ತುತ ಜಿಲ್ಲೆಗೆ ಪ್ರತಿದಿನ 50 ರಿಂದ 70 ಮಂದಿ ಹೊರ ರಾಜ್ಯಗಳಿಂದ ಆಗಮಿಸುತ್ತಿದ್ದಾರೆ ಎಂದರು.
ನಿನ್ನೆ ಒಂದೇ ದಿನ ಜಿಲ್ಲೆಯಲ್ಲಿ 329 ಮಂದಿಯ ಗಂಟಲ ದ್ರವ ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಕಂಡು ಬಂದಿದ್ದ ಪಾಸಿಟಿವ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಎಲ್ಲರ ಗಂಟಲ ದ್ರವ ತಪಾಸಣೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಎರಡನೇ ಹಂತದ ಸಂಪರ್ಕ ಹೊಂದಿದ್ದವರ ತಪಾಸಣೆ ನಡೆಸಲಾಗುವುದು.
ಅಂತರ ಜಿಲ್ಲಾ ಪಯಣಕ್ಕೆ ಪಾಸ್ ಬೇಡ:
ರಾಜ್ಯದಲ್ಲಿ ಲಾಕ್ಡೌನ್ ತೆರವುಗೊಳಿಸಿದ ಬಳಿಕ ಸರ್ಕಾರದ ಮಾರ್ಗಸೂಚಿ ಪ್ರಕಾರ ಅಂತರ ಜಿಲ್ಲಾ ಪಯಣಕ್ಕೆ ಯಾವುದೇ ಪಾಸ್ ಅಗತ್ಯವಿಲ್ಲ. ಖಾಸಗಿ ವಾಹನಗಳಲ್ಲಿ ಸಹ ಜನರು ಮಾರ್ಗಸೂಚಿ ಪ್ರಕಾರ ಪ್ರಯಾಣಿಸಬಹುದಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ತಿಳಿಸಿದ್ದಾರೆ
ಕ್ವಾರಂಟೈನ ಹೆಲ್ಪ್ ಲೈನ್ :
ಜಿಲ್ಲೆಯಲ್ಲಿ ಒಟ್ಟು 52 ಕ್ವಾರಂಟೈನ್ ಕೇಂದ್ರಗಳಿದ್ದು, ನಾಲ್ಕು ಕೇಂದ್ರಗಳಿಗೆ ಒಬ್ಬರಂತೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಕ್ವಾರಂಟೈನ್ ಕೇಂದ್ರಗಳಲ್ಲಿರುವವರು ಅಹವಾಲು ಸಲ್ಲಿಸಲು 24×7 ಕಂಟ್ರೋಲ್ ರೂಂ ಆರಂಭಿಸಲಾಗಿದ್ದು, 08182-220082 ಸಂಖ್ಯೆಗೆ ಕರೆ ಮಾಡಿ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ಹೇಳಿದರು.
ಪ್ರಕರಣ ದಾಖಲು:
ಕೋವಿಡ್-19 ಫಲಿತಾಂಶಕ್ಕೆ ಸಂಬಂಧಿಸಿದಂತೆ ಪಾಸಿಟಿವ್ ಬಂದಿರುವ ವ್ಯಕ್ತಿಗಳ ವೈಯಕ್ತಿಕ ಮಾಹಿತಿ ಸೋರಿಕೆ ಪ್ರಕರಣದ ಪ್ರಾಥಮಿಕ ತನಿಖೆ ನಡೆಸಲಾಗಿದೆ. ಈ ಕರ್ತವ್ಯದಲ್ಲಿದ್ದ ತಂಡವನ್ನು ಈಗಾಗಲೇ ಬದಲಾಯಿಸಲಾಗಿದೆ. ಈ ವರದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಮಾಹಿತಿ ನೀಡಿದರು.
ಮಾಸ್ಕ ಕಡ್ಡಾಯ:-
ಲಾಕ್ಡೌನ್ ಸಡಿಲಿಕೆ ಮಾಡಿದ್ದರೂ, ಯಾರೂ ಅನಗತ್ಯವಾಗಿ ಮನೆಯಿಂದ ಹೊರಬರಬಾರದು. ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ಮಾಸ್ಕ್ ಧರಿಸಬೇಕು. ಜಿಲ್ಲೆಯ ಜನರು ಜಾಗರೂಕರಾಗಿದ್ದರೆ ಆತಂಕ ಪಡುವ ಅಗತ್ಯವಿಲ್ಲ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಮಾಧ್ಯಮ ಗೋಷ್ಠಿಯಲ್ಲಿ ಜಿಲ್ಲಾಧಿಕಾರಿಗಳು ತಿಳಿಸಿದರು.